ಬೆಂಗಳೂರು: ರಾಜ್ಯ ಸರ್ಕಾರದ ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಅಥವಾ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಫ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಮೇ 13ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಮಂಡ್ಯ ಜಿಲ್ಲೆ ವ್ಯಾಪ್ತಿಯಲ್ಲಿರುವ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಸಾರ್ವಜನಿಕ ಆಸ್ಪತ್ರೆಗಳಿಗೆ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಅಥವಾ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 60 ಸಾವಿರ ರೂ. ಸಂಬಳ ನೀಡಲಾಗುತ್ತದೆ. ಎಂಬಿಬಿಎಸ್ ಪಾಸಾದವರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮಂಡ್ಯದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿಯೇ ಅರ್ಜಿಗಳನ್ನು ನೀಡಲಾಗುತ್ತಿದೆ. ಮೇ 3ರಿಂದಲೇ ಅರ್ಜಿಗಳನ್ನು ನೀಡಲಾಗುತ್ತಿದ್ದು, ಮೇ 13ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಕಚೇರಿಯಲ್ಲಿ ಅರ್ಜಿ ಪಡೆದು, ಅದನ್ನು ಭರ್ತಿ ಮಾಡಿ, ಅದೇ ಕಚೇರಿಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ. ಮೇ 13ರ ಸಂಜೆ 5.30ರವರೆಗೂ ಅರ್ಜಿ ಸಲ್ಲಿಸಲು ಅವಕಾಶ ಇದೆ.