ಬೆಂಗಳೂರು: ಸಿಲಿಕಾನ್ ಸಿಟೆಯಲ್ಲಿ ಕಳೆದ ಕೆಲವು ದಿನಗಳಿಂದ ಮಳೆರಾಯ ಬ್ರೇಕ್ ಪಡೆದಿದ್ದ. ಅಲ್ಲಲ್ಲಿ ಆಗಾಗ ಮಳೆ ಸುರಿಯುತ್ತಿದ್ದರೂ ಜನ – ಜೀವನ ಅಸ್ತವ್ಯಸ್ಥವಾಗುವಂತೆ ಸುರಿದಿರಲಿಲ್ಲ. ಆದರೆ, ಇಂದು ಸುರಿದ ಮಳೆಗೆ ಹಲವೆಡೆ ಜನ ತೊಂದರೆ ಪಡುವಂತಾಗಿತ್ತು.
ಭಾನುವಾರ ಬೆಂಗಳೂರಿನಲ್ಲಿ ಮಳೆಯಾಗಿದ್ದು, ಹಲವೆಡೆ ವಾಹನ ಸವಾರರು ಪರದಾಡಿದ್ದಾರೆ. ಆನಂದ್ ರಾವ್ ಸರ್ಕಲ್, ರೇಸ್ ಕೋರ್ಸ್, ಗಾಂಧಿನಗರ, ಶಾಂತಿನಗರ, ಜಯನಗರ ರಾಜಾಜಿನಗರ, ವಿಜಯನಗರ, ಕಾಮಾಕ್ಷಿ ಪಾಳ್ಯ, ಹೆಬ್ಬಾಳ, ಆರ್ ಟಿ ನಗರ, ಸಂಜಯ ನಗರ, ಯಶವಂತಪುರ ಸೇರಿದಂತೆ ಹಲವೆಡೆ ಮಳೆಯಾಗಿದೆ. ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಜನ ಪರದಾಡುವಂತಾಗಿತ್ತು.
ಇಂದು ಬೆಂಗಳೂರು ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿತ್ತು.
ಹೀಗಾಗಿ ಇಂದು ಕರಾವಳಿ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಲಾಗಿತ್ತು. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿತ್ತು. ಅಲ್ಲದೇ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿತ್ತು. ಅದರಂತೆ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ.