ಬೆಂಗಳೂರು: ರಾಜ್ಯದ ಹಲವೆಡೆ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಇನ್ನೂ ಕೆಲವಡೆ ಮಳೆರಾಯ ಆರ್ಭಟ ಕಡಿಮೆ ಮಾಡಿಕೊಂಡಿದ್ದಾನೆ.
ಆದರೆ, ಜುಲೈ 3ರಿಂದ ಮಳೆಯ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆಯಿದೆ. ಹೀಗಾಗಿ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗಲಿದ್ದು, ಜುಲೈ 3ರಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ.
ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಜುಲೈ 3ರಬಳಿಕ ಮಳೆ ಹೆಚ್ಚಾಗಲಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.