ಹಾಸನ: ಮಾಜಿ ಸಚಿವ ಹೆಚ್.ಡಿ ರೇವಣ್ಣ ನೇತೃತ್ವದಲ್ಲಿ ನಗರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಈ ಕುರಿತು ಮಾಧ್ಯಮಗಳು ವರದಿ ಮಾಡುತ್ತಲೇ ಇವೆ. ಆದರೂ ಈ ಸರ್ಕಾರಕ್ಕೆ ನಾಚಿಕೆ ಬರುತ್ತಿಲ್ಲ. ವಸತಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವುದು ಸಾಬೀತಾಗಿದೆ. ವಸತಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಕಾರಣರಾಗಿರುವ ಸಚಿವ ಜಮೀರ್ ಅಹ್ಮದ್ ರನ್ನು ಸರ್ಕಾರ ಕೂಡಲೇ ವಜಾ ಮಾಡಬೇಕು ಎಂದು ಈ ವೇಳೆ ಆಗ್ರಹಿಸಲಾಗಿದೆ.
ರಾಜ್ಯದಲ್ಲಿ ಯಥೇಚ್ಛವಾಗಿ ಮಳೆಯಾಗುತ್ತಿದೆ. ಹೆಚ್ಚು ಮಳೆಯಾಗುತ್ತಿರುವುದರಿಂದಾಗಿ ರೈತರು ಬೆಳೆದ ಬೆಳೆ ಹಾನಿಯಾಗುತ್ತಿದೆ. ಆದರೂ ಸರ್ಕಾರ ರೈತರ ಬಗ್ಗೆ ಕಾಳಜಿ ತೋರುತ್ತಿಲ್ಲ. ಕೂಡಲೇ ಸರ್ಕಾರ ರೈತರಿಗೆ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ. ಸರ್ಕಾರವನ್ನು ಸಂವಿಧಾನ ಬದ್ಧವಾಗಿ ನಡೆಸಲು ಕಾಂಗ್ರೆಸ್ ವಿಫಲವಾಗಿದೆ. ಈ ಕುರಿತ ರಾಜ್ಯಪಾಲರು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಹಾಸನ ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ ಮೂಲಕ ಜೆಡಿಎಸ್ ಮುಖಂಡರು ಮನವಿ ಸಲ್ಲಿಸಿದ್ದಾರೆ. ಪ್ರತಿಭಟನೆಯಲ್ಲಿ ಎ. ಮಂಜು, ಸಿ.ಎನ್ ಬಾಲಕೃಷ್ಣ, ಸ್ವರೂಪ್ ಪ್ರಕಾಶ್ ಸೇರಿದಂತೆ ಹಲವರು ಭಾಗಿಯಾಗಿದ್ದರು.