ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ (Channapatna Assembly Constituency) ಉಪ ಚುನಾವಣೆಯ ಟಿಕೆಟ್ ನ್ನು ಯೋಗೇಶ್ವರ್ ಗೆ ನೀಡುವಂತೆ ಹೈಕಮಾಂಡ್ ಬಳಿ ಮನವಿ ಮಾಡಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಶ್ವತ್ಥ್ ನಾರಾಯಣ ಹಾಗೂ ನಾನು ಸಿ.ಪಿ.ಯೋಗೇಶ್ವರ್ ಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೇವೆ. ಹೆಚ್.ಡಿ. ಕುಮಾರಸ್ವಾಮಿ (HD Kumarawamy) ಜೊತೆ ಕೂಡ ಈ ಕುರಿತು ಚರ್ಚೆ ನಡೆಸಿದ್ದೇವೆ. ಸಿಪಿ ಯೋಗೇಶ್ವರ್ ಅವರಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಬಳಿ ಕೇಳುತ್ತೇವೆ. ಯಾವಾಗ ದೆಹಲಿಗೆ ಹೋಗುತ್ತೇವೆ ಎಂದು ಶೀಘ್ರದಲ್ಲೇ ಹೇಳುತ್ತೇವೆ ಎಂದು ಹೇಳಿದ್ದಾರೆ.
ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ವಿಚಾರವಾಗಿ ಮಾತನಾಡಿದ ಅವರು, ಫೋಟೋ ತೆಗೆಯಲು ಅಲ್ಲಿ ಮೊಬೈಲ್ ಹೇಗೆ ಬಂತು? ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ. ಇಷ್ಟೆಲ್ಲ ಅಪರಾಧ ಪ್ರಕರಣಗಳು ನಡೆಯುತ್ತಿದ್ದರೂ ಕೆಲವು ಮಂತ್ರಿಗಳು ನಮಗೆ ಯಾವ ಖಾತೆ ಸಿಗುತ್ತದೆ. ಯಾವ ಖಾತೆ ಹೋಗುತ್ತದೆ ಎಂಬ ಭೀತಿಯಲ್ಲಿದ್ದಾರೆ. ಇದಕ್ಕೆ ಸರ್ಕಾರ ಉತ್ತರ ಕೊಡಬೇಕು ಎಂದು ತಾಕೀತು ಮಾಡಿದ್ದಾರೆ.
ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪದ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಹಗರಣದಲ್ಲಿ ಸಿಲುಕಿದೆ. ಹೀಗಾಗಿ ಜನರ ಮನಸ್ಸಿನ ವಿಷಯ ಡೈವರ್ಟ್ ಮಾಡುತ್ತಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.