ಬೆಂಗಳೂರು: ಕರ್ನಾಟಕ ಹೈಕೋರ್ಟ್ ನಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ (Rahul Gandhi) ರಿಲೀಫ್ ಸಿಕ್ಕಿದೆ. ಬಿಜೆಪಿ ವಿರುದ್ಧ ಆರೋಪ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ತಡೆ ನೀಡಿ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ಶುಕ್ರವಾರ ಆದೇಶ ಹೊರಡಿಸಿದೆ.
ರಾಹುಲ್ ಗಾಂಧಿ ತಮ್ಮ ವಿರುದ್ಧದ ಕೇಸ್ ರದ್ದು ಕೋರಿ ಅರ್ಜಿ ವಿಚಾರಣೆಯನ್ನು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ನಡೆಸಿದೆ. ಸುದ್ದಿ ಪತ್ರಿಕೆಗಳಲ್ಲಿ ಬಂದಿದ್ದನ್ನೇ ಷೇರ್ ಮಾಡಿದ್ದಕ್ಕೆ ಕೇಸ್ ಹಾಕಿದ್ದಾರೆ ಎಂದು ರಾಹುಲ್ ಗಾಂಧಿ ಪರ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದಾರೆ. ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲಿಸಿದ್ದ ಬಿಜೆಪಿಯ ಕೇಶವ ಪ್ರಸಾದ್ ಗೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶಿಸಿದೆ.
ಬಿಜೆಪಿ ಸರ್ಕಾರದ ವಿರುದ್ಧ ಕರಪ್ಶನ್ ರೇಟ್ ಕಾರ್ಡ್ ಜಾಹೀರಾತನ್ನು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ 40 ಪರ್ಸೆಂಟ್ ಕಮಿಷನ್ ಸಮರ ಸಾರಿತ್ತು. ಹೀಗಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ವಿರುದ್ಧ ಕೇಸ್ ದಾಖಲಾಗಿತ್ತು. 2024 ರ ಜೂನ್ 1ರಂದು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ಗೆ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರು ವಿಚಾರಣೆಗೂ ಹಾಜರಾಗಿದ್ದರು.