ಬೆಂಗಳೂರು: ಚಲಿಸುತ್ತಿದ್ದ ಬಸ್ ನಿಲ್ಲಿಸಿ ಸಾರಿಗೆ ಸಂಸ್ಥೆ ಬಸ್ ಚಾಲಕ ನಮಾಜ್ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸರ್ಕಾರ ತನಿಖೆಗೆ ಆದೇಶ ನೀಡಿದೆ.
ಹಾವೇರಿ (Haveri) ರಸ್ತೆ ಮಧ್ಯೆ ಬಸ್ ನಿಲ್ಲಿಸಿ ಡ್ರೈವರ್ ಕಂ ಕಂಡಕ್ಟರ್ ನಮಾಜ್ (Driver Namaz) ಮಾಡಿರುವ ಕುರಿತು ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಆದೇಶ ನೀಡಿದ್ದಾರೆ.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕರಿಗೆ ಪತ್ರ ಬರೆದಿರುವ ಸಚಿವರು, ಸೂಕ್ತ ತನಿಖೆಗೆ ಆದೇಶ ನೀಡಿದ್ದಾರೆ. ಹುಬ್ಬಳ್ಳಿಯಿಂದ ಹಾವೇರಿಗೆ ಕಾರ್ಯಾಚರಣೆಯಾಗುತ್ತಿದ್ದ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಚಾಲಕ ಕಂ ನಿರ್ವಾಹಕ ಮಾರ್ಗ ಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿರುವ ಕುರಿತು ಪ್ರಯಾಣಿಕರೊಬ್ಬರು ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದೆ.
ಸರ್ಕಾರಿ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಕೆಲವೊಂದು ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಪ್ರತಿಯೊಬ್ಬ ವ್ಯಕ್ತಿಗೂ ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿದ್ದರೂ ಸಹ ಸಾರ್ವಜನಿಕ ಸೇವೆಯಲ್ಲಿರುವವರು, ಕರ್ತವ್ಯದ ವೇಳೆ ಹೊರತುಪಡಿಸಿ ತಮ್ಮ ತಮ್ಮ ಧರ್ಮ ಪಾಲಿಸಬಹುದಾಗಿರುತ್ತದೆ. ಕರ್ತವ್ಯದ ಸಮಯದಲ್ಲಿ ಮಾರ್ಗ ಮಧ್ಯದಲ್ಲಿ ಬಸ್ ಅನ್ನು ನಿಲ್ಲಿಸಿ, ಬಸ್ನಲ್ಲಿ ಪ್ರಯಾಣಿಕರು ಸಹ ನಮಾಜ್ ಮಾಡಿರುವುದು ಆಕ್ಷೇಪಾರ್ಹ. ಕೂಡಲೇ ಈ ಕುರಿತು ತನಿಖೆ ನಡೆಸಿ, ಸಂಬಂಧಪಟ್ಟ ಸಿಬ್ಬಂದಿ ತಪ್ಪಿತಸ್ಥರೆಂದು ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.