ರಾಯಚೂರು: ವಿದ್ಯಾರ್ಥಿ ವಸತಿ ನಿಲಯದಲ್ಲಿನ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.
ರಾಯಚೂರು ತಾಲ್ಲೂಕಿನ ಚಂದ್ರಬಂಡಾ ರಸ್ತೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ ಉಪಾಹಾರ ಸೇವಿಸಿದ ಮಕ್ಕಳ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿದೆ. ಕೂಡಲೇ 43 ಮಕ್ಕಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳಿಗೆ ಫುಡ್ ಪಾಯ್ಸನ್ ಆಗಿದೆ ಎನ್ನಲಾಗಿದೆ.
ಪುಲಾವ್ ತಿಂದಿದ್ದ ಮಕ್ಕಳ ಆರೋಗ್ಯದಲ್ಲಿ ಏರುಪೇರು ಕಾಣಿಸಿತ್ತು. ತಿಂಡಿ ತಿಂದಾದ ನಂತರ ಅವರಲ್ಲಿ ವಾಂತಿ, ಬೇಧಿ, ತಲೆ ನೋವು, ಹೊಟ್ಟೆನೋವು ಕಾಣಿಸಿಕೊಂಡಿತ್ತು. ಪುಲಾವ್ ತಯಾರಿಸುವ ಸಂದರ್ಭದಲ್ಲಿ ಹಲ್ಲಿ ಬಿದ್ದಿತ್ತು ಎನ್ನಲಾಗಿದೆ. ಹೀಗಾಗಿಯೇ ಈ ಅಚಾತುರ್ಯ ನಡೆಯುವಂತಾಗಿದೆ.