ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಬಂಧಿಸಲು ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶವನ್ನು ಆ. 30 ರವರೆಗೆ ವಿಸ್ತರಣೆ ಮಾಡಿತ್ತು. ಈ ಕುರಿತು ಇಂದು ವಿಚಾರಣೆ ನಡೆಯಲಿದೆ. ಮಧ್ಯಂತರ ಆದೇಶ ತೆರವಾದರೆ ಮಾಜಿ ಸಿಎಂಗೆ ಬಂಧನ ಭೀತಿ ಎದುರಾಗಲಿದೆ.
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೋಕ್ಸೋ)ಯಡಿಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಇತ್ತೀಚೆಗೆ ಪ್ರಕರಣ ದಾಖಲಾಗಿತ್ತು. ಮಹಿಳೆಯೊಬ್ಬರು, ತಮ್ಮ ಪುತ್ರಿಯ ಮೇಲೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಾ. 14ರಂದು ಪ್ರಕರಣ ದಾಖಲಿಸಿದ್ದರು. ದೂರು ನೀಡಿದ್ದ ಮಹಿಳೆ ಅನಾರೋಗ್ಯದ ಹಿನ್ನೆಲೆಯಲ್ಲಿ ಇತ್ತೀಚೆಗೆ ಸಾವನ್ನಪ್ಪಿದ್ದರು.
ಮಾರ್ಚ್ 3ರಂದು ಅರ್ಜಿದಾರರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು. ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವರ್ಗಾಯಿಸಿತ್ತು. ತನಿಖೆ ಕೈಗೊಂಡ ಅಧಿಕಾರಿಗಳು, ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು.
ವಿಚಾರಣೆಗೆ ಹಾಜರಾಗದ ಯಡಿಯೂರಪ್ಪ, ತಮ್ಮ ಹೇಳಿಕೆ ನೀಡಿದ್ದರು. ಅಲ್ಲದೇ, ಪ್ರಕರಣ ರದ್ದು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಹೈಕೋರ್ಟ್ ಗೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಆದೇಶ ನೀಡಿತ್ತು. ನಂತರ ಆ. 30ರಂದು ಆದೇಶ ವಿಸ್ತರಣ ಮಾಡಿತ್ತು. ಹೀಗಾಗಿ ಇಂದು ವಿಚಾರಣೆ ನಡೆಯಲಿದ್ದು, ಕೋರ್ಟ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುವುದನ್ನು ಕಾಯ್ದು ನೋಡಬೇಕಿದೆ.