ಬೆಂಗಳೂರು: ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೀಗಾಗಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದರೆ, ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಉತ್ತರ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದೆ.
ಉತ್ತರ ಒಳನಾಡಿನ ಯಾದಗಿರಿ ಜಿಲ್ಲೆಯ ಕಕ್ಕೇರಿಯಲ್ಲಿ 13cm, ಶೋರಾಪುರ 10cm ಮಳೆ ದಾಖಲಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ 9cm ಹಾಗೂ ಬೆಂಗಳೂರಲ್ಲಿ 3cm ಮಳೆಯಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇರುವುದರಿಂದ ರಾಜ್ಯಕ್ಕೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಇಂದಿನಿಂದ ಮೇ 22ರ ವರೆಗೆ ರಾಜ್ಯಾದ್ಯಂತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 40 ರಿಂದ 50kmph ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ ಹೇಳಿದ್ದಾರೆ.