ಬೆಂಗಳೂರು : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 29ರ ವರೆಗೂ ಹೆಚ್ಚಿನ ಮಳೆಯಾಗಲಿದೆ. ಅಕ್ಟೋಬರ್ 30ರ ನಂತರ ಮಳೆಯ ಪ್ರಮಾಣ ತಗ್ಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
- ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಅಕ್ಟೋಬರ್ 29ರ ವರೆಗೂ ಮಳೆಯಾಗಲಿದೆ.
- ಉತ್ತರ ಕನ್ನಡದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
- ಅಕ್ಟೋಬರ್ 28 ಹಾಗೂ 29ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
- ಚಿಕ್ಕಮಗಳೂರು, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಎಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ.
- ಬೆಂಗಳೂರಲ್ಲಿ ಮುಂದಿನ 48 ಗಂಟೆಗಳು ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 20°C ಇರಲಿದೆ.
ಅಕ್ಟೋಬರ್ 25ರಿಂದ 28ರ ವರೆಗೆ ತಮಿಳುನಾಡು, ಕೇರಳ ಮತ್ತು ಮಾಹೆಯ ಹಲವೆಡೆ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶನಿವಾರ ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನಗಳಲ್ಲಿ ಈ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆಂಧ್ರ, ಯಾನಂ ಮತ್ತು ರಾಯಲಸೀಮಾದಲ್ಲಿ ಬಲವಾದ ಮೇಲ್ಮೈ ಗಾಳಿ (ಗಂಟೆಗೆ 30-50 ಕಿ.ಮೀ ವೇಗ) ಬೀಸುವ ಸಾಧ್ಯತೆ ಇದೆ ಎಂದೂ ಐಎಂಡಿ ತಿಳಿಸಿದೆ.
ಅಕ್ಟೋಬರ್ 25ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಹಗುರದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದಿರುವ ಇಲಾಖೆ, ಅಕ್ಟೋಬರ್ 28 ರಿಂದ 31ರ ವರೆಗೆ ಪಶ್ಚಿಮ ಬಂಗಾಳದ ಗಂಗಾ ಬಯಲು ಪ್ರದೇಶಗಳಲ್ಲಿ, ಅಕ್ಟೋಬರ್ 29 ರಂದು ಜಾರ್ಖಂಡ್ನಲ್ಲಿ, ಅಕ್ಟೋಬರ್ 26-29ರಿಂದ ಒಡಿಶಾದಲ್ಲಿ, ಅಕ್ಟೋಬರ್ 29 – 31ರಿಂದ ಉಪ – ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮತ್ತು ಅಕ್ಟೋಬರ್ 27-29ರಿಂದ ಒಡಿಶಾದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.
ಮುಂದಿನ ನಾಲ್ಕು ದಿನಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 40-50 ಕಿ.ಮೀ ವೇಗದಲ್ಲಿ) ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ : ಕೆನಡಾದಲ್ಲಿ ಪಂಜಾಬಿ ಹುಡುಗಿ ಹತ್ಯೆ: ಆರೋಪಿಗಾಗಿ ಹುಡುಕಾಟ


















