ಕರ್ನಾಟಕದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ವಿವಿಧ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರು ಹಾಗೂ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಪದವಿ, ಬಿ.ಇಡಿ, ಸ್ನಾತಕೋತ್ತರ ಪದವಿ ಹಾಗೂ ಬಿ.ಇಡಿ ಹಾಗೂ ಬಿಪಿ.ಇಡಿ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಮೇ 19 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು, ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ ಶಾಲೆ ಹಾಗೂ ಕಾಲೇಜುಗಳಲ್ಲಿ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು, ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಗೌರವಧನದ ಆಧಾರದ ಮೇಲೆ ನೇಮಕ ಮಾಡಲಾಗುತ್ತದೆ.
ವಿಜ್ಞಾನ ವಿಭಾಗ, ಕಲಾ ವಿಭಾಗ, ವಾಣಿಜ್ಯ ವಿಭಾಗ ಸೇರಿದಂತೆ, ಎಲ್ಲ ವಿಭಾಗಗಳಲ್ಲಿ ಖಾಲಿ ಇರುವ ವಿಷಯಗಳಿಗೆ ಎದುರಾಗಿ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಭೇಟಿ ನೀಡಿ, ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ.. ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಜತೆಗೆ, ಬಿ.ಇಡಿ ಶಿಕ್ಷಣ ಪಡೆದಿರಬೇಕು. ಟಿಇಟಿ ಜತೆಗೆ ಕಾರ್ಯಾನುಭವ ಇರುವವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಭ್ಯರ್ಥಿಗಳು ಸಂಬಂಧಪಟ್ಟ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳನ್ನು ಅರ್ಜಿ ಪಡೆಯಬಹುದಾಗಿದೆ. ಹಾಗೆಯೇ, https://dom.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಿಯೂ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಲ್ಲಿಸಬಹುದಾಗಿದೆ. ವಸತಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆ ಮಾಸಿಕ 12 ಸಾವಿರ ರೂ.ನಿಂದ 16 ಸಾವಿರ ರೂ.ವರೆಗೆ ಇರುತ್ತದೆ.