ಭಾರತೀಯ ಕ್ರಿಕೆಟ್ ತಂಡದ ಮಹಿಳಾ ಆಟಗಾರ್ತಿ ಸ್ಮೃತಿ ಮಂಧಾನ ವಿಶ್ವ ದಾಖಲೆಯೊಂದನ್ನು ಬರೆದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಭಾರತೀಯ ಮಹಿಳಾ ತಂಡ ಕಳಪೆ ಪ್ರದರ್ಶನ ನೀಡಿದರೂ ಮೂರನೇ ಏಕಿದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದ ಸ್ಮೃತಿ ಮಂಧಾನ ಶತಕ ಸಿಡಿಸುವ ಮೂಲಕ ಈ ದಾಖಲೆ ಬರೆದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲೆರಡು ಏಕದಿನ ಪಂದ್ಯಗಳಲ್ಲಿ ಸೋಲು ಕಂಡಿದ್ದ ಭಾರತ ತಂಡ ಮೂರನೇ ಪಂದ್ಯವನ್ನೂ ಕೈ ಚೆಲ್ಲುವ ಮೂಲಕ ಸರಣಿ ಸೋಲು ಕಂಡಿದೆ. ಈ ಪಂದ್ಯದಲ್ಲಿ ಏಕಾಂಗಿ ಹೋರಾಟ ನಡೆಸಿದ ಮಂಧಾನ ಮಾತ್ರ ದಾಖಲೆ ಬರೆದಿದ್ದಾರೆ. ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ತಂಡ ದೊಡ್ಡ ಮೊತ್ತ ಕಲೆ ಹಾಕಿತ್ತು. ಭಾರತದ ಪರ ಅಬ್ಬರಿಸಿದ್ದ ಸ್ಮೃತಿ ಮಂಧಾನ ಇದೇ ವರ್ಷದಲ್ಲಿ ನಾಲ್ಕನೇ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ.
ಈ ಪಂದ್ಯದಲ್ಲಿ ಸ್ಮೃತಿ ಮಂಧಾನ 14 ಬೌಂಡರಿ ಹಾಗೂ 1 ಸಿಕ್ಸರ್ ನ ನೆರವಿನಿಂದಾಗಿ 103 ಎಸೆತಗಳಲ್ಲಿ ಶತಕ ಪೂರೈಸಿದ್ದರು. ನಂತರ 105 ರನ್ ಗಳಿಸಿ ಔಟಾದರು. ಇದು ಸ್ಮೃತಿ ಮಂಧಾನ ಅವರ ನಾಲ್ಕನೇ ಏಕದಿನ ಶತಕವಾಗಿದೆ.
ಒಂದೇ ವರ್ಷದಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಸ್ಮೃತಿ ಪಾತ್ರರಾಗಿದ್ದಾರೆ. ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ 7 ಆಟಗಾರ್ತಿಯರು ಒಂದು ವರ್ಷದೊಳಗೆ 3 ಶತಕಗಳನ್ನು ಗಳಿಸಿದ ಸಾಧನೆ ಮಾಡಿದ್ದಾರೆ. ಆದರೆ ಮಂಧಾನ 4ರ ಗಡಿ ಮುಟ್ಟಿದ ಮೊದಲ ಆಟಗಾರ್ತಿ ಎಂಬ ದಾಖಲೆ ಬರೆದಿದ್ದಾರೆ.
ಸ್ಮೃತಿ ಮಂಧಾನ ತಮ್ಮ ಏಕದಿನ ವೃತ್ತಿ ಜೀವನದಲ್ಲಿ 9 ಶತಕಗಳನ್ನು ಪೂರೈಸಿದ್ದಾರೆ. ಈ ಮೂಲಕ ಭಾರತ ಪರ ಏಕದಿನದಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಮಹಿಳಾ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ. ಮಹಿಳಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ವಿಷಯದಲ್ಲಿ ಅವರು ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ. ಮೆಗ್ ಲ್ಯಾನಿಂಗ್ 15 ಶತಕಗಳೊಂದಿಗೆ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.