ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಬುಧವಾರ ಸುರಿದ ಮಳೆಗೆ ಅಲ್ಲಲ್ಲಿ ಅಸ್ತವ್ಯಸ್ಥವಾಗಿರುವ ಘಟನೆ ನಡೆದಿದೆ.
ಸಿಲಿಕಾನ್ ಸಿಟಿ ಸೇರಿದಂತೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯಾಗಿದೆ. ಧಾರವಾಡ, ಹಾವೇರಿ, ಚಾಮರಾಜನಗರ, ಮಂಡ್ಯ, ಹಾಸನ, ಕೊಪ್ಪಳ, ರಾಯಚೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಿದೆ. ರಾಯಚೂರಿನ ಲಿಂಗಸುಗೂರಿನಲ್ಲಿ 101 ಬಾಗಿಲುಗಳುಳ್ಳ 160 ವರ್ಷದ ಐತಿಹಾಸಿಕ ಕಟ್ಟಡ ಭಾಗಶಃ ಕುಸಿದು ಬಿದ್ದಿದೆ. ಅಲ್ಲಲ್ಲಿ ಜನ – ಜೀವನ ಅಸ್ತವ್ಯಸ್ಥಗೊಂಡಿದೆ.
ಈಗಾಗಲೇ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದ್ದು, ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ನಾಲ್ಕು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಹಲವೆಡೆ ಜೂನ್ 14ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರ ಶುರುವಾಗಿದ್ದು, ಹಲವೆಡೆ ಮಳೆಗಾಗಿ ರೈತರು ಕಾಯುತ್ತಿದ್ದಾರೆ.
ಯಾವ ದಿನ ಯಾವ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ?
ಉತ್ತರ ಕನ್ನಡ ಜಿಲ್ಲೆ ಹೊರತು ಪಡಿಸಿ ಉಳಿದ ಎಲ್ಲ 30 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂ. 12ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂ. 13ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಜೂ. 14ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ,ಧಾರವಾಡ, ಹಾವೇರಿ, ಹಾಸನ ಮೈಸೂರಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.