ಬೆಂಗಳೂರು : ವರ್ಷದಿಂದ ವರ್ಷಕ್ಕೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಅರ್ಜಿ ಸಲ್ಲಿಸುವವರ ಸಂಖ್ಯೆಯೂ ಹೆಚ್ಚಾಗ್ತಿದೆ. ಹೀಗಾಗಿ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ, ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕುವ ಪ್ರಕ್ರಿಯೆಯನ್ನೇ ಕೈಬಿಟ್ಟಿದೆ.
ಹೌದು.. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಹೊಸ ನಿಯಮ ಜಾರಿಗೊಳಿಸಲಾಗುತ್ತಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಪ್ರಕ್ರಿಯೆಯನ್ನು ಕೈ ಬಿಡಲಾಗಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಮಾಹಿತಿ ನೀಡಿದ್ದಾರೆ.
ಪ್ರಶಸ್ತಿಗೆ ಅರ್ಹ ವ್ಯಕ್ತಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಚಿಸಲಾಗುವ ಸಲಹಾ ಸಮಿತಿ ಹಾಗೂ ಉನ್ನತ ಆಯ್ಕೆ ಸಮಿತಿಗಳು ಅಂತಿಮಗೊಳಿಸಲಿದೆ. ಈ ವರ್ಷ 70 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು. ಈಗಾಗಲೇ ಇಲಾಖೆಗೆ ಸಲ್ಲಿಕೆಯಾಗಿರುವ ಸ್ವಯಂ ಅರ್ಜಿಗಳನ್ನು ಸಹ ಪ್ರಶಸ್ತಿ ಸಲಹಾ ಸಮಿತಿ ಮುಂದೆ ಮಂಡಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.