ಬೆಂಗಳೂರು: ನಾಳೆಯಿಂದ ಹೊಸ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಕಡ್ಡಾಯ ನಿಯಮ ಜಾರಿ ಮಾಡಿ ಬೆಸ್ಕಾಂ ಆದೇಶ ಹೊರಡಿಸಿದೆ.
ಬೆಸ್ಕಾಂ ತನ್ನ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಜುಲೈ 1ರಿಂದ ಅನ್ವಯವಾಗುವಂತೆ ಆದೇಶ ಜಾರಿ ಮಾಡಿದೆ. ಈ ಮೂಲಕ ಸ್ಮಾರ್ಟ್ ಮೀಟರ್ ಹೆಸರಿನಲ್ಲಿ ಗ್ರಾಹಕರಿಂದ 9 ಸಾವಿರ ರೂ. ಹೆಚ್ಚುವರಿ ಹಣ ಪಡೆಯಲು ಬೆಸ್ಕಾಂ ಮುಂದಾಗಿದೆ. ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯಗೊಳಿಸಿ ಆದೇಶ ಜಾರಿ ಮಾಡಲಾಗಿದೆ.
900 ರೂ. ಇದ್ದ ಮೀಟರ್ ದರವನ್ನು, ಸ್ಮಾರ್ಟ್ ಮೀಟರ್ ಹೆಸರಿನಲ್ಲಿ ಗ್ರಾಹಕರಿಂದ 9 ಸಾವಿರ ರೂ. ಗೆ ವಿತರಿಸಲಾಗುತ್ತಿದೆ. ಬೆಸ್ಕಾಂ ವ್ಯಾಪ್ತಿಗೆ ಒಳಪಡುವ ಬೆಂಗಳೂರು, ರಾಮನಗರ, ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಗಳ ಗ್ರಾಮಾಂತರ ಪ್ರದೇಶಗಳಲ್ಲಿ ಗ್ರಾಹಕರು ಇನ್ನು ಮುಂದೆ ಹೊಸ ವಿದ್ಯುತ್ ಸಂಪರ್ಕ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಲಾಗಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಆದೇಶದಂತೆ ಬೆಸ್ಕಾಂ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಯನ್ನ ಕಡ್ಡಾಯಗೊಳಿಸಲಾಗಿದೆ.